ಬೆಂಗಳೂರು: ಸಾರಿಗೆ ನೌಕರರ ವೇತನ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾ.21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ನ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್, ‘ಮಾ.21ರಂದು ಬೆಳಗ್ಗೆ 6ರಿಂದ 4 ನಿಗಮದ 23 ಸಾವಿರ ಬಸ್ಗಳು, 1 ಲಕ್ಷದ 25 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಹಿಂದಿನ ದಿನ ರಾತ್ರಿಯೇ 23 ಸಾವಿರ ಬಸ್ಗಳು ಡಿಪೋ ಸೇರಲಿದ್ದು ಹೊರಗೆ ಬರಲ್ಲ’ ಎಂದು ತಿಳಿಸಿದ್ದಾರೆ.
ಮುಷ್ಕರದಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಪಾಲ್ಗೊಂಡು ರಾಜ್ಯ ಸರಕಾರ ಸಾರಿಗೆ ನೌಕರರಿಗೆ ಮಾಡುತ್ತಿರುವ ಮಲತಾಯಿ ಧೋರಣೆ ಹಾಗೂ ವಿಳಂಬ ನೀತಿಯನ್ನು ತೀವ್ರವಾಗಿ ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.