ಮಂಗಳೂರು: ರಾಜ್ಯ ಬಿಜೆಪಿಯ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆ ಇಂದು ನಡೆಯಲಿದೆ.
ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನು ಆಲಿಸಲಾಗುವುದು. ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯವನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ನೂತನ ಶಾಸಕರ ಸಭೆ ಆರಂಭದಲ್ಲಿ ನಡೆಯಲಿದ್ದು ಬಳಿಕ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ.
ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ತಿಳಿಸಿದ್ದಾರೆ.