ಮಂಗಳೂರು(ಹೊಸದಿಲ್ಲಿ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿಯ ವೇಳೆ, “ಕೇಂದ್ರದ ಇತ್ತೀಚಿನ ಆಹಾರ ನೀತಿ, ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹಮ್ಮದ್ ಖಾನ್ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಉಪಸ್ಥಿತರಿದ್ದರು.