ಮಂಗಳೂರು: ಕರಾವಳಿಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40 ರಿಂದ 45 ಕಿಮೀ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ. ಹಾಗೆ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ.
ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ.