ಮಂಗಳೂರು(ಸುಬ್ರಹ್ಮಣ್ಯ): ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೆ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆಯಾಗದ ಕಾರಣ ಇಂದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಇದ್ದರೂ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಇದರ ಪರಿಣಾಮವಾಗಿ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆಗೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬರಬೇಕಾಗಿ ಬಂದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯುತ್ತಿದ್ದು ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು.