ಮಂಗಳೂರು(ಉಡುಪಿ): ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದ ತನಿಖಾಧಿಕಾರಿಯನ್ನು ಬದಲಾಯಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ. ನೂತನ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.
ಘಟನೆ ನಡೆದ ಕಾಲೇಜು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿ ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಗೌಡ ಕಾರ್ಯ ನಿರ್ವಹಿಸುತ್ತಿದ್ದರು. ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಶುಕ್ರವಾರ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ಬೆನ್ನಲೇ ಎಸ್‌ಪಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ಬೆಳ್ಳಿಯಪ್ಪ ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಿದ್ದಾರೆ. ಈ ನಡುವೆ ಮಂಡ್ಯದಲ್ಲಿ ಉಡುಪಿ ಪ್ರಕರಣದ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.