ಮಂಗಳೂರು: ನಗರದಾದ್ಯಂತ ಮಾದಕ ವಸ್ತು ‘ಎಂಡಿಎಂಎ’ಯನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸಹಿತ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂಡುಶೆಡ್ಡೆ ಗ್ರಾಮದ ಇಮ್ರಾನ್ ಯಾನೆ ಮೂಡುಶೆಡ್ಡೆ ಇಮ್ರಾನ್ (36), ಮಣಿಪಾಲದ ಬಡಗಬೆಟ್ಟುವಿನ ಅಮ್ಜತ್ ಖಾನ್(42), ಮಂಜನಾಡಿ ಗ್ರಾಮದ ಅಬ್ದುಲ್ ಬಶೀರ್ ಯಾನೆ ಅಬ್ಬಾಸ್ (39) ಬಂಧಿತರು ಎಂದು ಗುರುತಿಸಲಾಗಿದೆ.
ಬೋಂದೆಲ್-ಪಡುಶೆಡ್ಡೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ವಶಪಡಿಸಿ, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 170 ಗ್ರಾಂ ತೂಕದ 9,00,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎಂಡಿಎಂಎ ಫಿಲ್ಸ್-5, ಕಾರು-1, ಮೊಬೈಲ್ ಫೋನುಗಳು 6, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 14,76,500 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಇಮ್ರಾನ್ ಎಂಬಾತನ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಮಂಜೂರು ಚರಣ್‌ನ ಕೊಲೆ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, ಕಾವೂರು ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಾನಿಗೊಳಿಸಿದ ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆಯ ಪ್ರಕರಣ, ಕದ್ರಿ ಠಾಣಾ ವ್ಯಾಪ್ತಿ ಯಲ್ಲಿ ಎಂಡಿಎಂ ಸಾಗಾಟ ಮತ್ತು ಮಾರಾಟ ಪ್ರಕರಣ, ಉಡುಪಿ ಜಿಲ್ಲೆಯ ಸೆನ್ ಕ್ರೈಂ ಠಾಣೆಯಲ್ಲಿ ಎಂಡಿಎಂಎ ಸಾಗಾಟ ಮತ್ತು ಮಾರಾಟ ಪ್ರಕರಣ, ಕಾವೂರು ಠಾಣಾ ವ್ಯಾಪ್ತಿಯಲ್ಲಿ ಎಂಡಿಎಂಎ ಸಾಗಾಟ ಮತ್ತು ಮಾರಾಟ ಪ್ರಕರಣ ಸಹಿತ 9 ಪ್ರಕರಣಗಳು ದಾಖಲಾಗಿರುತ್ತದೆ. ಈತನು ಒಂದು ವಾರದ ಹಿಂದೆ ಜೈಲ್‌ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು. ಇನ್ನೋರ್ವ ಆರೋಪಿ ಅಬ್ದುಲ್ ಬಶೀರ್ ಯಾನೆ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.