ಮಂಗಳೂರು(ಬೆಂಗಳೂರು): ರಾಜ್ಯಗಳ ವಿಧಾನಸಭೆಗಳು ಹಾಗೂ ಲೋಕಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ‘ಒಂದು ದೇಶ, ಒಂದು ಚುನಾವಣೆ’ ಉದ್ದೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್, ಒಂದು ದೇಶ, ಒಂದು ಚುನಾವಣೆಯ ಉದ್ದೇಶ ದೇಶದ ಒಕ್ಕೂಟ ವ್ಯವಸ್ಥೆ ಮತ್ತು ರಾಜ್ಯಗಳ ಮೇಲೆ ದಾಳಿ ನಡೆಸುವುದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ವಿರೋಧಪಕ್ಷಗಳ ಮೈತ್ರಿಕೂಟ ಇಂಡಿಯಾ ಉಲ್ಲೇಖಿಸಿರುವ ರಾಹುಲ್, ‘ಇಂಡಿಯಾ ಅಂದರೆ ಭಾರತ, ಅದುವೇ ರಾಜ್ಯಗಳ ಒಕ್ಕೂಟ’ ಎಂದು ಹೇಳಿದ್ದಾರೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಾರ್ಯ ಸಾಧ್ಯತೆ ಬಗ್ಗೆ ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದಲ್ಲಿ ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ಕೇಂದ್ರ ಸರ್ಕಾರ ಸೆ.2ರಂದು ಅಧಿಸೂಚನೆ ಹೊರಡಿಸಿದೆ. ಆದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪರಿಗಣಿಸದಿದ್ದರಿಂದ ಸಮಿತಿಯ ಸದಸ್ಯರಾಗಲು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ನಿರಾಕರಿಸಿದ್ದಾರೆ.