ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು

ಮಂಗಳೂರು: ದ.ಕ. ಜಿಲ್ಲಾ ಪ್ರವಾಸದಲ್ಲಿದ್ದ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾ ಮಂಡಲರಾಗಿದ್ದು, ತಾಲೂಕು ವಿಸ್ತರಣಾ ಅಧಿಕಾರಿಯನ್ನು ಸ್ಥಳದಲ್ಲೇ ಅಮಾನತು ಮಾಡುವಂತೆ ಆದೇಶಿಸಿದ್ದಾರೆ.

ಸಚಿವರು ಸೆ.5ರಂದು ಸಂಜೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರೊಂದಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸಮರ್ಪಕವಾಗಿ ಮಾಡದಿರುವುದು ಕಂಡುಬಂದಿದೆ. ಇದೇ ವೇಳೆ ಹಾಸ್ಟೆಲ್ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡುವ ಬದಲು ಹದಿನೈದು ದಿನಕ್ಕೆ ಒಮ್ಮೆ ಮಾತ್ರ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ, ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು‌ ಸಚಿವರಲ್ಲಿ ದೂರಿದ್ದಾರೆ. ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಿನೇಂದ್ರ ಮತ್ತು ಹಾಸ್ಟೆಲ್ ವಾರ್ಡನ್ ಅಶೋಕ್ ಅವರಿಗೂ ನೋಟಿಸ್ ಜಾರಿಗೊಳಿಸಲಾಗಿದೆ.

LEAVE A REPLY

Please enter your comment!
Please enter your name here