ಮಂಗಳೂರು(ಬೆಂಗಳೂರು): ಅಕ್ರಮ ಸಕ್ರಮ ಯೋಜನೆಯಡಿ ಸಲ್ಲಿಸಲಾದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಪ್ರಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ವಿಕಾಸಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸೂಚನೆ ನೀಡಲಾಗಿದ್ದು, ಈ ಪ್ರಕ್ರಿಯೆಗಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50, 52 ಮತ್ತು 57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮತ್ತು ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಂಶ ಮೂಲಕ ಸಕ್ರಮಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಾದ್ಯಂತ ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50, 52 ಮತ್ತು 57ರ ಅಡಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ. ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದರೆ ಅಕ್ರಮ ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ ಎಂದು ಅವರು ತಿಳಿಸಿದರು. ಅಧಿಕಾರಿಗಳು ಎಲ್ಲ ಕಡೆ ತೆರಳಿ ಆ್ಯಪ್ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಿದೆ. ಇದು ಅರ್ಜಿಗಳ ಶೀಘ್ರ ವಿಲೇವಾರಿಗೂ ಸಹಾಯಕವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.