ಮಂಗಳೂರು(ಬೆಂಗಳೂರು): ಹುಲಿ ಉಗುರು ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಹಲವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಇದೀಗ ಚಿತ್ರನಟ ದರ್ಶನ್ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ಗೆ ನೋಟಿಸ್ ಜಾರಿಯಾಗಿದೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಜಗ್ಗೇಶ್ ಹುಲಿ ಉಗುರು ಪೆಂಡೆಂಟ್ ಧರಿಸಿದ ಬಗ್ಗೆ ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಕಾಂಗ್ರೆಸ್ನ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಜಗ್ಗೇಶ್ ಹಾಗೂ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ಇನ್ನು ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಹುಲಿ ಉಗುರು ಪೆಂಡೆಂಟ್ ಧರಿಸಿದ ಫೋಟೋಗಳು ಹರಿದಾಡುತ್ತಿದ್ದು, ಅದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತನ್ನ ಮೇಲೆ ಬಂದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಮದುವೆ ಸಮಯದಲ್ಲಿ ನಿಖಿಲ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಇದು ಸತ್ಯಕ್ಕೆ ದೂರವಾದ ವಿಷಯ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆಯ ಅರಿವು ನನಗಿದೆ ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವೇ ಹೊರತು ನೈಜ್ಯವಾದುದಲ್ಲ. ನನ್ನ ಮದುವೆ ಸಮಯದಲ್ಲಿ ಅದನ್ನು ನನಗೆ ಉಡುಗೊರೆಯಾಗಿ ನೀಡಿದ್ದರು. ಈಗಲೂ ಅದು ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು ಎಂದು ಸ್ಪಷ್ಟನೆ ನೀಡಿರುವ ಅವರು ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.