ಮಂಗಳೂರು: ನ.9ರಂದು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಗುಡ್ಡೆಕೇರಿ ಹೌಸ್, ಹೊಸಬೆಟ್ಟು, ಮಂಜೇಶ್ವರದ ಮುಸ್ತಫಾ (37) ಮತ್ತು ಮೂಲತಃ ಮಜಲಗುಡ್ಡ, ಕುಂಜತ್ತೂರಿನ ನಿವಾಸಿಯಾಗಿದ್ದು ಸದ್ಯ ಬೀರಿ, ಕೊಟೆಕಾರ್ ನ ಕೋಸ್ಟಲ್ ಅಪಾರ್ಟಮೆಂಟ್ ನಲ್ಲಿ ವಾಸವಿರುವ ಶಂಶುದ್ದೀನ್ (38) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಡಿಸಿಪಿ ಸಿದ್ದಾರ್ಥ ಗೋಯಲ್, ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.