ಎಚ್‌ ಡಿಕೆ ಮನೆಗೆ ದೀಪಾವಳಿ ಅಲಂಕಾರ – ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ – ವೀಡಿಯೊ ಹಂಚಿಕೊಂಡ ಕಾಂಗ್ರೆಸ್ – ಅಚಾತುರ್ಯಕ್ಕೆ ವಿಷಾದವಿದೆ ಎಂದ ಎಚ್‌ ಡಿಕೆ

ಮಂಗಳೂರು (ಬೆಂಗಳೂರು): ‘ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್.ಡಿ ಕುಮಾರಸ್ವಾಮಿಯವರ ಬೆಂಗಳೂರಿನ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ’ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ವೀಡಿಯೊ ಹಂಚಿಕೊಂಡಿರುವ ಕಾಂಗ್ರೆಸ್ ”ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ” ಎಂದು ಹೇಳಿದೆ.

ಕುಮಾರಸ್ವಾಮಿ ಅವರೇ, ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!” ಎಂದು ಕಟಕಿಯಾಡಿದೆ.

ಈ ಘಟನೆಗೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ”ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ” ಎಂದೂ ಅವರು ಹೇಳಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here