ಮಂಗಳೂರು(ಬಜಪೆ): ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ನಿಂದಿಸಿದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.11ರಂದು ಬಿಜೆಪಿ ಕಾರ್ಯಕರ್ತ ಎನ್ನಲಾದ, ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ಎಂಬಾತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶ್ರೀ ನಾರಾಯಣ ಗುರು ಯುವ ವೇದಿಕೆ ಎಂಬ ವಾಟ್ಸಾಪ್ ಗ್ರೂಪೊಂದರಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ವಾಯ್ಸ್ ರೆಕಾರ್ಡ್ ಮಾಡಿ ಹರಿಯಬಿಟ್ಟಿದ್ದು, ಇದು ಇತರ ಹಲವಾರು ಗ್ರೂಪ್ ಗಳಲ್ಲೂ ವೈರಲ್ ಆಗಿತ್ತು ಎನ್ನಲಾಗಿದೆ. ಈ ಬಗ್ಗೆ ಮುತ್ತೂರು ವಲಯದ ಕಾಂಗ್ರೆಸ್ ಅಧ್ಯಕ್ಷ ಹರಿಯಪ್ಪ ಎಂಬವರು ಡಿ.14 ರಂದು ಬಜ್ಪೆ ಠಾಣೆಗೆ ದೂರು ನೀಡಿದ್ದರು. ಸದ್ರಿ ದೂರಿನಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.