ರಾಜ್ಯದ ‘ಕೈ’ ನಾಯಕರಿಗೆ ವರಿಷ್ಠರ ಬುಲಾವ್-ಡಿ.18ರಂದು ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರು ದೆಹಲಿಗೆ

ಮಂಗಳೂರು(ಬೆಳಗಾವಿ): ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ಮತ್ತು ನಿಗಮ– ಮಂಡಳಿಗಳಿಗೆ ನೇಮಕ ಸಂಬಂಧ ಚರ್ಚಿಸಲು ಡಿ.18ರಂದು ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ವರಿಷ್ಠರು ಆಹ್ವಾನ ನೀಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ  ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರಾದ ಬೈರತಿ ಸುರೇಶ್‌ ಮತ್ತು ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಕೆಲವು ಸಚಿವರಿಗೆ ಡಿ.14ರಂದು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. 18ರಿಂದ ಮೂರು ದಿನ ಎಲ್ಲಾ ನಾಯಕರು ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪಕ್ಷದ ಪರಿಷ್ಠರು ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಪಕ್ಷ ಸಂಘಟನೆ, ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ, ನಿಗಮ– ಮಂಡಳಿಗಳಿಗೆ ನೇಮಕ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.

ರಾಜ್ಯದ ಲೋಕಸಭೆ ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ‌ ಪಟ್ಟಿಯ ಸಹಿತ ವರಿಷ್ಠರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಮತ್ತು ಶಿವಕುಮಾರ್‌, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ. ನಿಗಮ, ಮಂಡಳಿಗೆ ನೇಮಕದ ಪಟ್ಟಿ ಈಗಾಗಲೇ ವರಿಷ್ಠರಿಗೆ ತಲುಪಿದೆ. ಆದರೆ, ಪಟ್ಟಿಯ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನ ಒಪ್ಪಿಕೊಳ್ಳಲು ಕೂಡಾ ನಿರಾಕರಿಸುತ್ತಿದ್ದಾರೆ . ಈ ಬಗ್ಗೆಯೂ ಚರ್ಚೆ ನಡೆಯಲಿದೆ. ಜೊತೆಗೆ ಪಕ್ಷದ ಪದಾಧಿಕಾರಿಗಳ ಬದಲಾವಣೆ ಬಗ್ಗೆಯೂ ವಿಚಾರವಿನಿಮಯ ನಡೆಯಲಿದೆ ಎಂದೂ ಮೂಲಗಳು ಹೇಳಿವೆ. ಈ ಮಧ್ಯೆ, ನರೇಗಾ ಬಾಕಿ ಬಿಡುಗಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಘೋಷಿಸಿದ ₹ 5 ಸಾವಿರ ಕೋಟಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರದ ಸಚಿವರನ್ನೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭೇಟಿ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here