ರಾಜ್ಯ ಬಿಜೆಪಿ ಕಾರ್ಯದರ್ಶಿ ಸ್ಥಾನಕ್ಕೆ ಮಂಗಳೂರಿನ ಯುವ ನಾಯಕ ಕ್ಯಾ.ಬ್ರಿಜೇಶ್ ಚೌಟ ಆಯ್ಕೆ

ಮಂಗಳೂರು: ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಪದವಿಯಲ್ಲಿದ್ದಾಗ ಎನ್ ಸಿಸಿಯಲ್ಲಿ ಬೆಸ್ಟ್ ಕೇಡೆಟ್ ಎಂದು ಗುರುತಿಸಿಕೊಂಡಿದ್ದು, ದೆಹಲಿ ರಿಪಬ್ಲಿಕ್ ಪೆರೇಡ್ ನಲ್ಲೂ ಪಾಲ್ಗೊಂಡಿದ್ದರು. ಯುಪಿಎಸ್‌ಸಿ ಆಯೋಜಿಸುವ ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಪರೀಕ್ಷೆ ಹಾಗೂ ಎಸ್‌ ಎಸ್‌ ಬಿ ಇಂಟರ್ವ್ಯೂನಲ್ಲಿ ತೇರ್ಗಡೆಗೊಂಡು ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂ ಸೇನೆಯ 8 ಗೋರ್ಖಾ ರೈಫಲ್ಸ್ ನ 7ನೇ ಬಾಟಲಿಯನ್ ನಲ್ಲಿ ಅಧಿಕಾರಿಯಾಗಿ ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಬ್ರಿಜೇಶ್ ಚೌಟ ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು, 2013ರಲ್ಲಿ ಯುವಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿದ್ದರು. ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿದ್ದ ಕ್ಯಾಪ್ಟನ್ ಚೌಟ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.

2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣಾ ಕರ್ತವ್ಯದಲ್ಲಿ ಪಾಲ್ಗೊಂಡಿದ್ದು, ರಾಜ್ಯ ಬಿಜೆಪಿ ಚುನಾವಣಾ ಸಮಿತಿಯ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡ ಒಬ್ಬರಾಗಿದ್ದರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವಕರ ಪಡೆ ಕಟ್ಟಿಕೊಂಡು ಸತತ ಆರು ವರ್ಷಗಳಿಂದ ಮಂಗಳೂರು ಕಂಬಳ ಹೆಸರಲ್ಲಿ ಕಂಬಳ ನಡೆಸುತ್ತಿದ್ದಾರೆ. ಮಂಗಳೂರು ಲಿಟ್ ಫೆಸ್ಟ್ ಆಯೋಜಕರಾಗಿ, ಸಮರ್ಥನ್ ಫೌಂಡೇಶನ್ ಟ್ರಸ್ಟಿಯಾಗಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಬ್ರಿಜೇಶ್ ಚೌಟ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಚೌಟ ಅವರಿಗೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಸ್ಥಾನಕ್ಕೆ ಭಡ್ತಿ ಸಿಕ್ಕಿದ್ದು ಸೇವಾ ಕಾರ್ಯದ ವ್ಯಾಪ್ತಿ ವಿಸ್ತರಣೆಯಾಗಿದೆ.

LEAVE A REPLY

Please enter your comment!
Please enter your name here