ಕೋವಿಡ್‌ನಿಂದ 7 ಸಾವು-ಶೀಘ್ರದಲ್ಲಿ ಹೊಸ ಮಾರ್ಗಸೂಚಿ ಪ್ರಕಟ-ಕಾರ್ಯಕ್ರಮ, ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಪ್ರಸ್ತಾವ ಇಲ್ಲ-ಸಚಿವ ದಿನೇಶ್ ಗುಂಡೂರಾವ್

ಮಂಗಳೂರು(ಬೆಂಗಳೂರು): ಕೋವಿಡ್ ಸೋಂಕಿನಿಂದ ಇತ್ತೀಚಿನ ದಿನಗಳಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ನಾಲ್ಕು ಜನರು ಕೋವಿಡ್ ಲಸಿಕೆಯನ್ನೇ ಪಡೆದಿರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಂಪುಟ ಉಪ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೃತಪಟ್ಟ ಮೂವರಲ್ಲಿ ಜೆಎನ್.1 ತಳಿಯ ಕೋವಿಡ್ ವೈರಾಣುವಿನ ಸೋಂಕು ಇರುವುದು ದೃಢಪಟ್ಟಿದೆ ಎಂದರು. ಹೊಸ ಉಪ ತಳಿಯ ಕೋವಿಡ್ ವೈರಾಣುವಿನ ಹರಡುವಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳ ಬಗ್ಗೆಯೂ ಮಾಹಿತಿ ಪಡೆದು, ಚರ್ಚೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಫ್ಲೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಅಗತ್ಯ ಇರುವವರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಕೂಡ ನೀಡಲಾಗುವುದು. ಇದಕ್ಕಾಗಿ 30,000 ಡೋಸ್ ಕೋವಿಡ್ ಲಸಿಕೆ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದರು. ನಾಲ್ಕು ಆಮ್ಲಜನಕ ಸಂಚಾರಿ ಘಟಕಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಸನ್ನದ್ಧತೆ ಪರೀಕ್ಷಿಸಲಾಗುವುದು. ಕೋವಿಡ್ ವೈರಾಣುವಿನ ವಂಶವಾಹಿ ಸಂರಚನೆ ಪರೀಕ್ಷೆ ಹೆಚ್ಚಳಕ್ಕೂ ತೀರ್ಮಾನಿಸಲಾಗಿದೆ ಎಂದರು. ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗುವುದು. ಕಾರ್ಯಕ್ರಮ, ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಪ್ರಸ್ತಾವ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here