



ಮಂಗಳೂರು(ಮಂಡ್ಯ): ಕಳೆದ ಡಿ.24ರ ಭಾನುವಾರದಂದು ಹಿಂದೂ ಜಾಗರಣಾ ವೇದಿಕೆಯು ಶ್ರೀರಂಗಪಟ್ಟಣ ಪಟ್ಟಣದಲ್ಲಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







ಮಹಿಳಾ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಎಂಬುವರು ದೂರು ನೀಡಿದ್ದಾರೆ. ದೂರಿನ ಹಿನ್ನಲೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 294, 295, 298, 354, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಸ್ಲಿಂ ಮಹಿಳೆಯರ ಬಗ್ಗೆ ಪ್ರಭಾಕರ ಭಟ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ’ ಎಂದು ನಜ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಪ್ರಭಾಕರ ಭಟ್ ವಿರುದ್ಧ ಈ ಹಿಂದೆಯೂ ರಾಜ್ಯದ ಹಲವು ಠಾಣೆಗಳಲ್ಲೂ ಈ ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಅವರ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ನಜ್ಮಾ ದೂರಿನಲ್ಲಿ ಒತ್ತಾಯಿಸಿದ್ದಾರೆ.















