ಮಂಗಳೂರು(ಬೆಂಗಳೂರು): 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರಾದ ಸಿ.ಎನ್. ಅಶ್ವತ್ಥನಾರಾಯಣ್, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಬಸವರಾಜ ಧಡೇಸೂಗುರು ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗ ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕುವ ಸಲುವಾಗಿ ಸಮನ್ಸ್ ಜಾರಿ ಮಾಡಲಾಗಿದೆ. ಪಿಎಸ್ಐ ಅಕ್ರಮದ ಬಗ್ಗೆ ಕುಮಾರಸ್ವಾಮಿ, ಅಶ್ವತ್ಥನಾರಾಯಣ್ ಹಾಗೂ ಅವರ ಸೋದರ ಸತೀಶ್, ಯತ್ನಾಳ, ಬಸವರಾಜ ಧಡೇಸೂಗುರು ಇತರರನ್ನು ವಿಚಾರಣೆ ನಡೆಸಬೇಕು ಎಂದು ಕೋರಿ ಕೆಲ ವಕೀಲರು ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ, ಎಲ್ಲರಿಗೂ ಇದೀಗ ಸಮನ್ಸ್ ನೀಡಲಾಗಿದೆ. ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಆರೋಪದಡಿ ಕಾನ್ಸ್ಟೆಬಲ್ ಸಿ.ಎಸ್. ನಾಗೇಶ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಈತ, ಸಿ.ಎನ್. ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಸುದ್ದಿಯಾಗಿತ್ತು. ಕುಮಾರಸ್ವಾಮಿ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಅಕ್ರಮದ ಬಗ್ಗೆ ಮಾತನಾಡಿದ್ದರು. ಅಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ಧಡೇಸೂಗುರು ಭಾಗಿಯಾದ ಬಗ್ಗೆ ವಿಡಿಯೋಗಳು ಹರಿದಾಡಿದ್ದವು.