ಮಂಗಳೂರು(ಬೆಂಗಳೂರು): ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಬರೆದುಕೊಂಡಿರುವ ಅವರು, ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಅಮಾಧಾನ ವ್ಯಕ್ತಪಡಿಸಿದ್ದಾರೆ. ನವ ಕರ್ನಾಟಕದ ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ “ಎಂದು ಹೇಳಿದ್ದಾರೆ.