ಮಂಗಳೂರು (ಬೆಂಗಳೂರು): ನಿಗಮಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು ಮತ್ತು 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿಗಮ ಮಂಡಳಿಗಳ ನೇಮಕ ಪಟ್ಟಿ ಯಾವುದೇ ಕ್ಷಣದಲ್ಲಿ ಬಿಡುಗಡೆ ಆಗಬಹುದು. ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದವರು. ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ಜ.19ರಂದು ಸಂಜೆ 4.30 ಕ್ಕೆ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಸಲಾಗುವುದು. ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಭೆಯನ್ನು ಸಂಜೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಮೊದಲ ಸುತ್ತಿನ ಚರ್ಚೆ ನಡೆಯಲಿದೆ. ಈ ಸಭೆಗೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಆಹ್ವಾನಿಸಲಾಗಿದೆ, ಹಾಗೂ ಚುನಾವಣಾ ಸಮಿತಿಯಲ್ಲಿದ್ದವರು ಇರಲಿದ್ದಾರೆ ಎಂದ ಅವರು ಹೇಳಿದ್ದಾರೆ.