ಮಂಗಳೂರು: ಅಯೋಧ್ಯೆಯಲ್ಲಿ ಇಂದು ನಡೆಯುವ ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟಣೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆಗುವ ಸಂದೇಶಗಳ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತದೆ ಎಂದು ಎಸ್ಪಿ ರಿಷ್ಯಂತ್ ತಿಳಿಸಿದ್ದಾರೆ.
ಈಗಾಗಲೇ ಕೆಎಸ್ಸಾರ್ಪಿ ಹಾಗೂ ಡಿಎಆರ್ ಪಡೆಗಳನ್ನು ಜಿಲ್ಲೆಯ ಆಯಾ ಕಟ್ಟಿನ ಸ್ಥಳಗಳಲ್ಲಿ ನಿಯೋಜನೆ ಮಾಡಲಾಗಿದೆ. ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಠಾಣಾ ಪೊಲೀಸರಿಂದ ಹಗಲು ಹಾಗೂ ರಾತ್ರಿ ಗಸ್ತನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಸಂದೇಶಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಸೂಕ್ತ ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿ ಅಕ್ಷೇಪಾರ್ಹ ಬರಹ ಅಥವಾ ಬಿತ್ತಿ ಚಿತ್ರಗಳನ್ನು ಪ್ರದರ್ಶಿಸುವುದು ಅಥವಾ ಅವುಗಳನ್ನು ಅಳವಡಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಸಿದ್ದಾರೆ. ಮಂಗಳೂರಿನ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಸಲಾಗಿದೆ.
ತುರ್ತು ಸಂಪರ್ಕಕ್ಕಾಗಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ: 0824/ 2220500 ಅಥವಾ 112 ಸಹಾಯವಾಣಿಗೆ ಕರೆ ಮಾಡಬಹುದು ಎಂದು ಮನವಿ ಮಾಡಿದ್ದಾರೆ.