ಮಂಗಳೂರು(ಕೋಲ್ಕತ್ತಾ): ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಮತಾ ಬ್ಯಾನರ್ಜಿ ಅವರ ಕಾರು ಕೋಲ್ಕತ್ತಾದಲ್ಲಿ ಅಪಘಾತಕ್ಕೀಡಾಗಿದ್ದು, ಅವರ ತಲೆ ಸಣ್ಣ ಗಾಯವಾಗಿದೆ ಎನ್ನಲಾಗಿದ್ದು, ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಪೂರ್ಬ ಬರ್ದಮಾನ್ ಗೆ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಾರ್ಯಕ್ರಮವನ್ನು ಮೊಟಕುಗೊಳಿಸಿ ಕಲ್ಕತ್ತಾ ಗೆ ಮಮತಾ ಬ್ಯಾನರ್ಜಿ ಮರಳಿದ್ದಾರೆ.
ಕೆಲವು ಗಂಟೆಗಳ ಹಿಂದೆಯಷ್ಟೇ ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಯಾವುದೇ ಮೈತ್ರಿ ಇಲ್ಲ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಯ ಬಗ್ಗೆ ಯಾವುದೇ ನಿರ್ಧಾರವನ್ನು ಚುನಾವಣೆಯ ನಂತರ ತೆಗೆದುಕೊಳ್ಳಲಾಗುವುದು ಎಂದು ಮಮತಾ ಬ್ಯಾನರ್ಜಿ ಸ್ಫೋಟಕ ಹೇಳಿಕೆ ನೀಡಿದ್ದರು.
ಇನ್ನೊಂದೆಡೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ನ ಎಲ್ಲಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.