ಮಂಗಳೂರು(ಬೆಂಗಳೂರು): ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 2022ರಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡುವ ಮೂಲಕ ಸಾರ್ವಜನಿಕರಿಗೆ ಅಡ್ಡಿ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಕೋರಿ ಸಿದ್ದರಾಮಯ್ಯ ಮತ್ತು ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ. ಜೊತೆಗೆ, ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಬೇಕು ಎಂದು ಸಿದ್ದರಾಮಯ್ಯ ಪರ ವಕೀಲರು ಮಾಡಿದ ಮನವಿಯನ್ನು ನ್ಯಾಯಪೀಠ ಇದೇ ವೇಳೆ ತಿರಸ್ಕರಿಸಿದೆ. ಅಲ್ಲದೇ, ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಲು ಸಿಎಂಗೆ ನ್ಯಾಯಪೀಠ ಸೂಚನೆ ನೀಡಿದೆ. ಹಾಗೆಯೇ ಕೋರ್ಟ್ಗೆ ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸಿಂಗ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ ಬಿ ಪಾಟೀಲ್ ಹಾಜರಾಗಬೇಕು ಎಂದು ಪೀಠ ಆದೇಶಿಸಿದೆ. ಒಂದೇ ದಿನ ಎಲ್ಲರೂ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾದರೆ ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಉಂಟಾಗುತ್ತದೆ. ಅದನ್ನು ತಡೆಯಲು ಬೇರೆ ಬೇರೆ ದಿನ ನಿಗದಿಪಡಿಸಲಾಗಿದೆ ಎಂದು ಪೀಠ ತಿಳಿಸಿತು.
ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಪಿಎಸ್‌ಐ ಜಹಿದಾ ಅವರನ್ನು ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ತಲಾ 10 ಸಾವಿರ ರೂ ದಂಡ ವಿಧಿಸಲಾಗಿದೆ. ಈ ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮೆ ಮಾಡಬೇಕು ಎಂದು ನ್ಯಾಯಪೀಠ ಇದೇ ವೇಳೆ ತಿಳಿಸಿದೆ. ಜನ ಪ್ರತಿನಿಧಿಗಳಾದವರು ಕಾನೂನು ಪಾಲಿಸಿದರೆ ಸಾರ್ವಜನಿಕರೂ ಅದನ್ನು ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ. ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ಇಲ್ಲಿನ ಜನರಿಗೆಲ್ಲಿ ದೊಡ್ಡ ಸಮಸ್ಯೆಯಾಗುತ್ತದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು? ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಆರೋಪ ಸಂಬಂಧ ಅಂದಿನ ಲೋಕೋಪಯೋಗಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಕಾಂಗ್ರೆಸ್ ಪಕ್ಷದ ಮುಖಂಡರು ರೇಸ್ ವ್ಯೂ ಹೋಟೆಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದರಿಂದ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ಬಂಧನ ವಾರಂಟ್ ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.