



ಮಂಗಳೂರು: ನಗರದ ಸೇಂಟ್ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಫೆ.19ರಂದು ವಿಚಾರಣೆ ಆರಂಭಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು ಬೆಳವಣಿಗೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಅವರು ಪ್ರಾಥಮಿಕ ಮಾಹಿತಿ ಕಲೆಹಾಕಿದ್ದು, ಇಲಾಖೆಯ ಒಬ್ಬೊಬ್ಬ ಅಧಿಕಾರಿಯನ್ನು ಪ್ರತ್ಯೇಕವಾಗಿ ಕರೆಯಿಸಿಕೊಂಡು ವಿಚಾರಣೆ ನಡೆಸಿದ್ದಾರೆ.







ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಸತ್ಯಶೋಧನೆ ಪ್ರಕ್ರಿಯೆಯನ್ನು ಆರಂಭಿಸಿದ್ದೇನೆ. ಬೆಳಿಗ್ಗೆ 10ರಿಂದ ಸಂಬಂಧಪಟ್ಟ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದೇನೆ. ಇನ್ನಷ್ಟು ಮಾಹಿತಿ ಕಲೆ ಹಾಕಬೇಕಿದೆ. ಈ ಹಂತದಲ್ಲಿ ವಿಚಾರಣೆ ಕುರಿತು ಏನನ್ನೂ ಹೇಳಲು ಇಷ್ಟಪಡುವುದಿಲ್ಲ. ತನಿಖೆಗೆ ಎಲ್ಲರೂ ಸಂಪೂರ್ಣ ಸಹಕಾರ ಕೊಡಬೇಕು ಎಂದು ಹೇಳಿರುವ ಆಕಾಶ್ ಶಂಕರ್ ಎರಡು ದಿನಗಳು ಇಲ್ಲೇ ಇದ್ದು, ವಿಚಾರಣೆ ಪೂರ್ಣಗೊಳಿಸಿ ಆದಷ್ಟು ಬೇಗ ಸರಕಾರಕ್ಕೆ ವರದಿ ಸಲ್ಲಿಸುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿ ವಸ್ತುನಿಷ್ಠ ವರದಿ ಸಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.




ಇನ್ನೊಂದೆಡೆ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಪೋಷಕರೊಬ್ಬರಿಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಪೋಷಕಿಯ ಕುಟುಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ವ್ಯಕ್ತವಾಗಿದೆ. ಜೆಪ್ಪಿನಮೊಗರು ನಿವಾಸಿಯಾಗಿರುವ ಪೋಷಕಿ ***** ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.












