



ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ 46 ಗ್ರಾಂ ಎಂಡಿಎಂಎ ಯನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ನೆಹರೂ ಮೈದಾನದ ಬಳಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಂಟ್ವಾಳದ ಲೋರೆಟ್ಟೋ ಬಾರೆ ಕಾಡು ಹೌಸ್ ನಿವಾಸಿ ಅಬ್ದುಲ್ ಸಮದ್ ಯಾನೆ ಸಮದ್ ಯಾನೆ ಚಮ್ಮು(36) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಲ್ಲಿದ್ದ ರೂ. 2,30,000/- ರೂ ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.












