ಮಂಗಳೂರು: ಮಂಗಳೂರು ನಗರದ ಕಪಿತಾನಿಯೊ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾ.27ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 432 ವಿದ್ಯಾರ್ಥಿಗಳು ಈ ಕೇಂದ್ರದ 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷೆ ನಡೆಯುತ್ತಿದ್ದ ಹಲವು ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಪೂರೈಕೆಯೂ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಿರುವ ಬಗ್ಗೆ ಕೇಂದ್ರದ ಮುಖ್ಯಸ್ಥರೊಂದಿಗೆ ಮಾಹಿತಿ ಪಡೆದುಕೊಂಡು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು. ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಕ್ರಮವಹಿಸುವಂತೆ ಸೂಚಿಸಿದರು. ಡಿಡಿಪಿಐ ವೆಂಕಟೇಶ್ ಪಟಗಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ವೆಂಕಟೇಶ್ ನಾಯಕ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜ ಜೊತೆಯಲ್ಲಿದ್ದರು.