ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ-ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.325 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಾ.27 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಅದನ್ನು ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿಕೊಂಡು ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮಂಗಳೂರಿನ ವಾಮಂಜೂರು ಮೂಲದ ನಿವಾಸಿ ಸದ್ಯ ನೀರುಮಾರ್ಗ ಜಂಕ್ಷನ್ ನ ಬೇಬಿ ಕಾಂಪ್ಲೆಕ್ಸ್‌ ನಲ್ಲಿ ವಾಸವಿರುವ ನಿಶಾಂತ್ ಶೆಟ್ಟಿ(35) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಲ್ಲಿದ್ದ ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ಟೆಂಪೋ ನಂಬ್ರ: KA-19-AE-3448  ನೇದನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ ರೂ. 1,50,000/- ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾವನ್ನು, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪಕ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 9,11,500/- ಆಗಿರುತ್ತದೆ ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ. ಈ ಮಾದಕ ವಸ್ತು ಗಾಂಜಾ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಬಸವರಾಜಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here