ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಎಲ್ಲಾ ಕಾರ್ಮಿಕರಿಗೆ ಶುಕ್ರವಾರ(ಎ.26) ವೇತನಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚಿಸಿದ್ದಾರೆ.
‘ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕು. ಮತ ಚಲಾಯಿಸಲು ರಜೆ ನೀಡದಿದ್ದರೆ ಹಾಗೂ ಮತದಾನ ಮಾಡಲು ಅವಕಾಶ ಕಲ್ಪಿಸದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಅಡಿ ಕ್ರಮ ಜರುಗಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.