ಮಂಗಳೂರು(ಬೆಂಗಳೂರು): ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 8ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ತುಮಕೂರು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ. ಇದೇ ಹವಾಮಾನ ಮುಂದಿನ ಎರಡು ದಿನ ಮುಂದುವರಿಯಲಿದೆ. ತಾಪಮಾನದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಇರುವುದಿಲ್ಲ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.