ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ-ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಸೆರೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ  ಪೊಲೀಸರು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರಿನಲ್ಲಿದ್ದ  ಬಿಜೈ ನ್ಯೂ ರೋಡ್, 2ನೇ A ಕ್ರಾಸ್ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ಗ್ರಾಮದ ಬಂಡ್ಸಾಲೆ ಹೌಸ್ ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ಜೆ.ಎಂ.ಕ್ರಾಸ್ ರಸ್ತೆಯ ಬಾವಾ ಮಹಲ್ ನಿವಾಸಿ ಮೊಹಮ್ಮದ್ ನೌಮಾನ್(22), ಬೋಳಿಯಾರ್ ಗ್ರಾಮದ ಕಂಡಿಮಾರ್ ಹೌಸ್ ನಿವಾಸಿ ಮೊಹಮ್ಮದ್ ಸಫೀಲ್(23) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಎಂದು ಅಂದಾಜಿಸಲಾಗಿದೆ. ಈ ಬಗ್ಗೆ  ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ  ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು 2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here