ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ-ರಾಜ್ಯ ಸರಕಾರದ ಸುತ್ತೋಲೆ

Vidhana Soudha

ಮಂಗಳೂರು(ಬೆಂಗಳೂರು): ರಾಜ್ಯ ಸರಕಾರ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಿಕೊಳ್ಳುವಂತೆ ಸುತ್ತೋಲೆ ಹೊರಡಿಸಿದೆ.

Vidhana Soudha

ರಾಜ್ಯ ಸರಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಛತಾ ಸಿಬ್ಬಂದಿ, ಗ್ರೂಪ್‌ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರಕಾರದ ಇತ್ತೀಚಿನ ಕಾರ್ಯನೀತಿಯಾಗಿರುತ್ತದೆ. 2023 ಡಿ.29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಅದರಂತೆ ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕೆಲವೊಂದು ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಮೇ.20ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸೂಚನೆಗಳು:

1. ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
2. ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
3. ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
4. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡ‌ರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
5. ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ / ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
6. ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
7. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
8. ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.

LEAVE A REPLY

Please enter your comment!
Please enter your name here