ಮಂಗಳೂರು: ಮಂಗಳೂರಿನ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಪಟ್ಟಂತೆ, ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋಧಿಸುವ ರೀತಿ ಪೋಸ್ಟ್ ಹಾಕಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ದಾಖಲಾದ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಶರಣ್ ವಿರುದ್ದ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ರದ್ದುಪಡಿಸಬೇಕು ಎಂದು ಕೋರಿ ಆರೋಪಿಯು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತನಿಖೆಗೆ ಮಧ್ಯಂತರ ತಡೆ ನೀಡಿದೆ. ಇದೇ ವೇಳೆ ಪೊಲೀಸ್ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ. 27ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್ನ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.