ಮಂಗಳೂರು/ಬೆಂಗಳೂರು: ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ (ಜೂ.14) ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದೆ. ಇಂದಿನಿಂದ ಜೂ.22ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ರಾಜ್ಯದ ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಆ ಪೈಕಿ 1,44,160 ಬಾಲಕರು ಮತ್ತು 79,148 ಬಾಲಕಿಯರು.
ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿರುತ್ತಾರೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದ್ದು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ. ಜಿಲ್ಲಾ ಮತ್ತು ತಾಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.