ಭಾರೀ ಮಳೆ ಸಾಧ್ಯತೆ – ಮುಂದಿನ 48 ಗಂಟೆ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು/ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಅರೇಂಜ್ ಅಲರ್ಟ್ ಕೊಡಲಾಗಿದೆ. ಕೊಡಗು, ಗದಗ, ಕೊಪ್ಪಳ, ಬಳ್ಳಾರಿ, ಹಾಸನ, ರಾಯಚೂರು, ಬೀದರ್, ಬಾಗಲಕೋಟೆ, ಧಾರವಾಡ, ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ನಿರಂತರ ಗಾಳಿ ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ಪ್ರತಿ ಘಂಟೆಗೆ ಇರಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಧಾರವಾಡ, ಹಾಸನ, ಕೊಡಗು ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here