ಮಂಗಳೂರು/ಅಂಕೋಲಾ: ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಜು.16ರಂದು ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೆದ್ದಾರಿ ಪಕ್ಕದಲ್ಲಿದ್ದ ಮನೆಯಲ್ಲಿನ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಎರಡು ಕುಟುಂಬದ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕೊಂಡಿದ್ದಾರೆ ಎನ್ನಲಾಗುತ್ತಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ್(11), ಅವಾಂತಿಕಾ(6), ಜಗನ್ನಾಥ(55) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಗುಡ್ಡ ಕುಸಿತಿದಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಾರವಾರ ಗೋವಾ ಅಂಕೋಲಾದಿಂದ ಕೇರಳ, ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿದೆ. ಚತುಷ್ಪಥ ಹೆದ್ದಾರಿಗಾಗಿ ಗುಡ್ಡವನ್ನ ಕೊರೆಯಲಾಗಿತ್ತು. ಭಾರಿ ಮಳೆಗೆ ಗುಡ್ಡ ಕುಸಿದಿದ್ದು ಹೆದ್ದಾರಿಯ ತುಂಬಾ ಮಣ್ಣು ಕಲ್ಲುಗಳು ಬಿದಿದ್ದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿ, ಟ್ಯಾಂಕರ್ ಸೇರಿದಂತೆ ಅನೇಕ ವಾಹನಗಳಿಗೆ ಹಾನಿ ಸಂಭವಿಸಿದೆ ಎನ್ನಲಾಗಿದೆ. ಎರಡು ಗ್ಯಾಸ್ ಟ್ಯಾಂಕರ್ ಪಕ್ಕದಲ್ಲಿರುವ ಗಂಗಾವಳಿ ನದಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು ನದಿ ಪಾತ್ರದ ಜನರನ್ನು ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಅಂಕೋಲಾ ತಾಲೂಕು ಆಡಳಿತ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಕಾರ್ಯಾಚರಣೆ ನಡೆದಿದೆ. ಆದರೆ ನಿಖರವಾಗಿ ಎಷ್ಟು ಜನರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನುವುದರ ಬಗ್ಗೆ ಇನ್ನಷ್ಟೇ ತಿಳಿಯಬೇಕಾಗಿದೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಂಸದ ಕಾಗೇರಿ ಘಟನೆಯಲ್ಲಿ 7 ಮಂದಿ ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ. ಮಣ್ಣಿನಡಿ ಸಿಲುಕಿರುವ ಮೃತ ದೇಹಗಳನ್ನು ಹೊರ ತೆಗೆಯುವ ಕೆಲಸ ಮುಂದುವರೆದಿದ್ದು ಈಗಾಗಲೇ ಮಹಿಳೆಯೊಬ್ಬರ ಮೃತ ದೇಹವನ್ನು ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ