ಮಂಗಳೂರು/ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿಕೊಂಡಿದ್ದಾರೆ.
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ(ಜು.16) ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ತಮ್ಮ ಟ್ವಿಟ್ ಡಿಲೀಟ್ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಏಕಾಏಕಿ ಟ್ವೀಟ್ ಡಿಲೀಟ್ ಮಾಡಲು ಕಾರಣವೇನು ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ಶೇ. 100 ರಷ್ಟು ಎನ್ನುವುದು ಇತ್ತು. ಆದರೆ ಬಿಲ್ ನಲ್ಲಿ ಆ ರೀತಿ ಇಲ್ಲ. ಮ್ಯಾನೇಜ್‌ಮೆಂಟ್ ಕೋಟಾದಲ್ಲಿ 50% ನಾನ್ ಮ್ಯಾನೇಜ್‌ಮೆಂಟ್ ಕೋಟಾ 70% ಎಂಬ ನಿಯಮ ಬಿಲ್ ನಲ್ಲಿ ಇದೆ. ಹೀಗಾಗಿ ಸಿಎಂ ನೂರಕ್ಕೆ ನೂರರಷ್ಟು ಅನ್ನುವ ಪದ ಬಳಕೆ ಟ್ವೀಟ್ ನಲ್ಲಿ ಮಾಡಿದ್ದಕ್ಕೆ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ.