ಮಂಗಳೂರು/ ವಯನಾಡು: ಭೀಕರ ಭೂಕುಸಿತಕ್ಕೊಳಗಾದ ಕೇರಳದ ವಯನಾಡಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಆ.1ರಂದು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ, ಮೇಪ್ಪಾಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಕೂಡಾ ಇದ್ದರು.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, “ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿಯ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ” ಎಂದು ಬರೆದುಕೊಂಡಿದೆ.
ಜು.30 ರಂದು ವಯನಾಡಿನ ಚೂರಲ್‌ಮಲ, ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 250 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 200 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯು ಮುಂದುವರೆದಿದೆ.