ಪಶ್ಚಿಮಘಟ್ಟ ಉಳಿಸಲು ಸರಕಾರದ ಆದ್ಯತೆ- ಭೂ ಪರಿವರ್ತನೆಗೆ ತಡೆ

ಮಂಗಳೂರು (ಬೆಂಗಳೂರು): ಭಾರೀ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜೀವವೈವಿಧ್ಯ ತಾಣ ಪಶ್ಚಿಮಘಟ್ಟದ ಸಂರಕ್ಷಣೆಗೆ ‘ಪ್ರಾದೇಶಿಕ ನಿಯಂತ್ರಣ ಮತ್ತು ಸಮಗ್ರ ಯೋಜನೆ’ ನಿಯಮಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ.

ಈ ಕುರಿತು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶ್ಚಿಮಘಟ್ಟ ಉಳಿಸಲು ಹೊಸ ನಿಯಮಗಳನ್ನು ರೂಪಿಸುವ ಅಗತ್ಯವಿದ್ದು, ಅಲ್ಲಿಯವರೆಗೂ ಭೂ ಪರಿವರ್ತನೆಯ ಎಲ್ಲಾ ಪ್ರಸ್ತಾವಗಳನ್ನೂ ತಡೆಹಿಡಿಯಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಇದಕ್ಕೆ ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

ಕರ್ನಾಟಕ, ಕೇರಳದ ಹಲವೆಡೆ, ಭೂಮಿ, ಗುಡ್ಡ ಕುಸಿತ ಪ್ರಕರಣಗಳು ಆತಂಕ ತಂದಿವೆ. ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಕಾರಣ ಎನ್ನುವುದು ದೃಢಪಟ್ಟಿದೆ. ಭೂಕುಸಿತ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ಈಚೆಗೆ ಮತ್ತೊಮ್ಮೆ ಹೊರಡಿಸಿರುವ ಅಧಿಸೂಚನೆ ಕುರಿತು ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರನ್ನು ಒಳಗೊಂಡ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರ ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here