ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚದ ಪ್ರಕರಣದ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಮಾ.9ರಂದು ‘ಕರ್ನಾಟಕ ಬಂದ್’ಗೆ ಪ್ರತಿಪಕ್ಷ ಕಾಂಗ್ರೆಸ್ ಕರೆ ನೀಡಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಮಾ.5ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಕಟಣೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. ಶೇ.40ರಷ್ಟು ಕಮಿಷನ್ ಸರಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರಕಾರವಾಗಿದೆ’ ಎಂದು ಟೀಕಿಸಿದ್ದಾರೆ. ಬಿಜೆಪಿ ಹಾಗೂ ಬೊಮ್ಮಾಯಿ ಸರಕಾರದ ಭ್ರಷ್ಟಾಚಾರಕ್ಕೆ ಕೆಎಸ್‍ಡಿಎಲ್ ಅಕ್ರಮ ಸಾಕ್ಷಿಯಾಗಿದೆ. ಬಿಜೆಪಿ ಸರಕಾರದ ವಿರುದ್ಧ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಮಾ.9ರ ಬೆಳಗ್ಗೆ 9ಗಂಟೆಯಿಂದ 11ಗಂಟೆಯ ವರೆಗೆ ‘ಸಾಂಕೇತಿಕ ಬಂದ್’ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದ್ದು ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬಸವರಾಜ ಬೊಮ್ಮಾಯಿ ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.