ಮಂಗಳೂರು: ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳಲಾಗಿದ್ದು, ಮುಸ್ಲಿಮರ ಶೇ.4ರ ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.4ರಿಂದ 6 ಹಾಗೂ ಶೇ. 5ರಿಂದ 7ಕ್ಕೆ ಹೆಚ್ಚಿಸಲಾಗಿದೆ.
ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಜನರಿಗೆ ಮೀಸಲಾತಿ ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ಮಾತನಾಡಿದ ಸಿಎಂ, 2ಸಿ, 2ಡಿ ಹೊಸ ಪ್ರವರ್ಗ ಸೃಷ್ಟಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಮುಸ್ಲಿಂ ಸಮುದಾಯದ ಶೇ 4ರ ಮೀಸಲಾತಿ ವಾಪಸು ಪಡೆದಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ (ಇಡಬ್ಲೂಎಸ್) ಅಡಿ ಪರಿಗಣಿಸಲು ನಿರ್ಧರಿಸಿದೆ. ಬಳಿಕ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ 2ರ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದೆ.