ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸರಕಾರ ನಿರ್ಧಾರ? – ಜೂನ್ 8 ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ

ಮಂಗಳೂರು : ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಗಡೆವಾರ್ ಪಠ್ಯ ಸೇರಿದಂತೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆಯ ಸಂದರ್ಭ ಸೇರ್ಪಡೆಯಾಗಿರುವ ಪಠ್ಯಗಳನ್ನು ಕೈ ಬಿಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜೂನ್ 6 ರಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, 2017ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ವಿ ಪಿ ನಿರಂಜನರಾಧ್ಯ ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪರಿಷ್ಕರಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇದೇ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ತಜ್ಞರು, ಸಾಹಿತಿಗಳು, ಸರಕಾರಕ್ಕೆ ಮನವರಿಕೆ ಮಾಡಿದ್ದಾರೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ತರಗತಿಗಳು ಪ್ರಾರಂಭವಾಗಿದೆ. ಪಠ್ಯಪುಸ್ತಕಗಳ ವಿತರಣೆಯೂ ಆಗಿದೆ. ಈ ಹಂತದಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ಮಾಡುವುದು ಕಷ್ಟ. ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ ಮತ್ತು ಮುದ್ರಣಕ್ಕೆ ಆರ್ಥಿಕ ಹೊರೆಯ ಜೊತೆಗೆ ಮೂರು ತಿಂಗಳ ಸಮಯ ಅವಕಾಶ ಬೇಕು ಎಂದು ಸಲಹೆ ನೀಡಿದ್ದಾರೆ. ಸದ್ಯ ಪಠ್ಯ ಪರಿಷ್ಕರಣೆ ಕಷ್ಟ ಸಾಧ್ಯ. ಹಾಗಾಗಿ ಯಾವ ಪಠ್ಯವನ್ನು ತೆಗೆದುಕೊಳ್ಳಬೇಕು ಯಾವುದನ್ನು ಬಿಡಬೇಕು ಎಂಬ ಬಗ್ಗೆ ಶಾಲೆಗಳಿಗೆ ಸುತ್ತೋಲೆ ಕಳುಹಿಸಲು ಸಲಹೆ ನೀಡಲಾಗಿದ್ದು, ಮುಖ್ಯ ಮಂತ್ರಿಗಳು ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಜೂನ್ 8ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here