ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್, ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಸಿಎಂ ಸೂಚನೆ

ಮಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞವೈದ್ಯರ ಕೊರತೆ ಮತ್ತು ಎಂ ಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜೂನ್ 13 ರಂದು ನಡೆದ ಆರೋಗ್ಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಬೇಕು ಹಾಗೂ ಈ ಎಲ್ಲಾ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಮೂರು ತಿಂಗಳಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ ಇದೇ ಪರಿಸ್ಥಿತಿ ಮುಂದುವರಿದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ ಕೆ ಅನಿಲ್ ಕುಮಾರ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ ಸಿ ಜಾಫರ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಎನ್ ಜಯರಾಮ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here