



ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







ಜೂನ್ 23 ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು 24ರಂದು ನಡೆಯಬೇಕಿದ್ದ ಕಾಲೇಜ್ ವಾರ್ಷಿಕೋತ್ಸವವನ್ನು ಮುಂದೂಡಲಾಗಿದೆ. ಎರಡು ದಿನ ಎಂದಿನಂತೆ ತರಗತಿ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚಿಸಲಾಗಿದೆ.



ಈ ಕಾರ್ಯಕ್ರಮಕ್ಕೆ ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಪತ್ರಕರ್ತ ಎನ್ನಲಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಎಂಬ ವ್ಯಕ್ತಿಯನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಎನ್ ಎಸ್ ಯು ಐ ದ.ಕ ಜಿಲ್ಲಾ ಸಮಿತಿ ಆಕ್ಷೇಪ ವ್ಯಕ್ತ ಪಡಿಸಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮಂಗಳೂರು ವಿವಿ ಕುಲಪತಿಗೆ ಮನವಿ ಸಲ್ಲಿಸಿ ಮತೀಯ ದ್ವೇಷ ಹರಡುವ ಶ್ರೀಕಾಂತ್ ಶೆಟ್ಟಿ ಕಾರ್ಕಳ ಎಂಬ ವ್ಯಕ್ತಿಯನ್ನು ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಹ್ವಾನಿಸಬಾರದು ಎಂದು ಒತ್ತಾಯಿಸಿತ್ತು. ಆದರೆ ಅದಕ್ಕೆ ಸೂಕ್ತ ರೀತಿ ಸ್ಪಂದನೆ ಸಿಕ್ಕಿರಲಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾಸ್ ಆಳ್ವ, ಶ್ರೀಕಾಂತ್ ಶೆಟ್ಟಿ ಮತೀಯ ದ್ವೇಷಿ ವ್ಯಕ್ತಿ. ಈತನನ್ನು ಅತಿಥಿಯಾಗಿ ಆಹ್ವಾನಿಸಿರುವುದು ಸರಿಯಲ್ಲ. ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ರೀತಿಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದೆವು. ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಪಾಲ್ಗೊಂಡರೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದೆವು. ನಮ್ಮ ಮನವಿಗೆ ಹಿರಿಯ ಅಧಿಕಾರಿಗಳು ಸ್ಪಂದಿಸಿದ್ದು ಅದರ ಫಲವಾಗಿ ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮ ಮುಂದೂಡಿರುವುದಾಗಿ ಪ್ರಕಟಿಸಿದ್ದಾರೆ ಎಂದು ತಿಳಿಸಿದ್ದಾರೆ.











