ಮಂಗಳೂರು( ಮೈಸೂರು): ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗಡುವಿಲ್ಲ, ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು.ಈ ವಿಷಯದಲ್ಲಿ ಯಾರಿಗೂ ಆತಂಕ ಬೇಡ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆಪ್ ಮಾಡಿದ್ದೇವೆ. ಆಪ್ ಮೂಲಕ ಅರ್ಜಿ ಸಲ್ಲಿಸಲು ತಯಾರಿ ಮಾಡಿದ್ದೇವೆ. ಮುಂದಿನ ಸಚಿವ ಸಂಪುಟದಲ್ಲಿ ಅನುಮತಿ ಪಡೆದು ಆಪ್ ಬಿಡುಗಡೆ ಮಾಡುತ್ತೇವೆ. ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ನಿರಂತರವಾಗಿ ಮುಂದುವರಿಯಲಿದೆ ಎಂದು ಸಚಿವೆ ಸ್ಪಷ್ಟಪಡಿಸಿದ್ದಾರೆ.
ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವು ಇರುವುದಿಲ್ಲ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ನೀವು ಫಲಾನುಭವಿಗಳ ಪಟ್ಟಿಗೆ ಸೇರುತ್ತೀರಿ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದ ಅವರು ಗೃಹಲಕ್ಷ್ಮಿ ಯೋಜನೆ ಜಾರಿಗೆ ಹಣಕಾಸಿನ ಕೊರತೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ. ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದರು.