ಮಂಗಳೂರು: ಬಿಟ್ ಕಾಯಿನ್ ಹಗರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸಿಐಡಿ ಗೆ ಪತ್ರ ಬರೆದಿದ್ದಾರೆ.
ಇತ್ತೀಚಿಗೆ ಬಿಟ್ ಕಾಯಿನ್ ಹಗರಣದ ಬಗ್ಗೆ ಮರುತನಿಖೆ ನಡೆಸುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ನಗರದ ಪೊಲೀಸ್ ಆಯುಕ್ತ ಬಿ ದಯಾನಂದ್ ಈ ಹಗರಣದ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಳ್ಳುವಂತೆ ಸಿಐಡಿ ಗೆ ಪತ್ರ ಬರೆದಿದ್ದಾರೆ.
ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಈ ಬಿಟ್ ಕಾಯಿನ್ ಹಗರಣದಲ್ಲಿ ಶ್ರೀ ಕೃಷ್ಣ ಯಾನೆ ಶ್ರೀಕಿ ಪ್ರಮುಖ ಆರೋಪಿಯಾಗಿದ್ದಾನೆ. ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್ಫಾರ್ಮ್ ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್ ಕಾಯಿನ್ ಗಳನ್ನು ಕದ್ದಿದ್ದ ಎಂದು ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ವಿವಿಧ ಸೈಬರ್ ಅಪರಾಧಗಳಲ್ಲಿ ಭಾಗಿಯಾದ ಆರೋಪದಲ್ಲಿ ಶ್ರೀಕಿ ಹಾಗೂ ಇತರರ ವಿರುದ್ಧ 2021ರ ಫೆಬ್ರವರಿ 22ರಂದು ಮೊದಲ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು.