ಮಂಗಳೂರು: ಮನೆಯೊಡತಿಗೆ 2000 ರೂಪಾಯಿ ಹಣ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ ತಿಂಗಳಲ್ಲಿ ಫಲಾನುಭವಿಗಳಿಗೆ ಹಣ ತಲುಪಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ರೂಪಿಸಿದ್ದು ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಸಚಿವೆ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಆ್ಯಪ್ ಮಾಡಲಾಗಿದೆ ಎಂದ ಅವರು ಸಚಿವ ಸಂಪುಟದ ತೀರ್ಮಾನದಂತೆ ಜುಲೈ 14 ರಿಂದ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದೆ ಎಂದು ಮಾಹಿತಿ ನೀಡಿದರು.