ಮಂಗಳೂರು: ರಾಜ್ಯದ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದು ತಿಂಗಳು ಕಳೆದರೂ ಈವರೆಗೆ ಪ್ರತಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವಲ್ಲಿ ವಿಫಲವಾಗಿದೆ.
ಜುಲೈ 3 ರಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿರುವುದರಿಂದ ಸದನದಲ್ಲಿ ಪ್ರತಿಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಬಿಜೆಪಿ ಪಾಳಯದಿಂದ ಈವರೆಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಜುಲೈ 2 ರಂದು ಕರೆಯಲಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ರದ್ದು ಮಾಡಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜುಲೈ 2 ರಂದು ಹೊಸದಿಲ್ಲಿಯಲ್ಲಿ ಬಿಜೆಪಿ ಹಿರಿಯ ನಾಯಕರ ಸಭೆಯನ್ನು ಕರೆಯಲಾಗಿದ್ದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಇದೇ ಸಭೆಯಲ್ಲಿ ವಿಧಾನಸಭೆ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕನ ಹಾಗೂ ವಿಪಕ್ಷದ ಮುಖ್ಯ ಸಚೇತಕರ ಹೆಸರು ಘೋಷಣೆಯಾಗುವ ನಿರೀಕ್ಷೆ ಇದೆ.