ಬೆಳ್ಳಂಬೆಳಿಗ್ಗೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್

ಮಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ಆಸ್ತಿ ಮೀರಿ ಆದಾಯ ಗಳಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18ಕ್ಕೂ ಅಧಿಕ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ  ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.  ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೀದರ್​ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ನಿವಾಸಿ, ಚಿಟಗುಪ್ಪ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್​ಟೇಬಲ್​ ವಿಜಯಕುಮಾರ್ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ ಬಿಬಿಎಂಪಿ ಎಇಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲೂ ಲೋಕಾಯುಕ್ತ ದಾಳಿಯಾಗಿದ್ದು, ಕೊಡಗು ಅಪರ ಜಿಲ್ಲಾಧಿಕಾರಿ ನಂಜುಡೇಗೌಡ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿರುವ ಕೆ.‌ಮಹೇಶ್, ಕೆ.ಭಾರತಿ ದಂಪತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 15 ಲಕ್ಷ ರೂ.ಗಿಂತಲೂ ಅಧಿಕ ನಗದು, 1 ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದೆ.

ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್‌ ಅವರ ಮನೆ ಹಾಗೂ ಫಾರಂ ಹೌಸ್‌ ಗೆ ದಾಳಿ ಮಾಡಲಾಗಿದೆ. ನಟರಾಜ್‌ ನಾಪತ್ತೆಯಾಗಿದ್ದು, ಮನೆಯ ಇತರ ಸದಸ್ಯರ ಸಮ್ಮುಖ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಫಾರಂ ಹೌಸ್‌ ಗೆ ಬೀಗ ಹಾಕಲಾಗಿದ್ದು, ದಾಳಿ ನಡೆಸಲು ಬಂದ ಅಧಿಕಾರಿಗಳು ಗೇಟ್ನಲ್ಲಿ ಕಾಯುವಂತಾಗಿದೆ.

LEAVE A REPLY

Please enter your comment!
Please enter your name here