ಮಂಗಳೂರು(ಬೆಂಗಳೂರು): ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೋಷಕರು ಕೇಂದ್ರ ಸರ್ಕಾರವನ್ನು ಕೋರಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣ ಕುರಿತಂತೆ ಹಾಗೂ ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.